ಬೆಂಗಳೂರು, ಡಿಸೆಂಬರ್ 14; ಮಾಜಿ ಶಾಸಕ, ಬಿಜೆಪಿ ನಾಯಕ ವಿ. ಎಸ್. ಪಾಟೀಲ್ ಕಾಂಗ್ರೆಸ್ ಸೇರಲಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ವಿ. ಎಸ್.‌ ಪಾಟೀಲ್ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಈ ಮೂಲಕ ಉತ್ತರ ಕನ್ನಡದ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಆರಂಭವಾಗಲಿದೆ.

ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ವಿ. ಎಸ್. ಪಾಟೀಲ್ ಮಧು ಬಂಗಾರಪ್ಪ ಜೊತೆ ಕೆಲವು ದಿನಗಳ ಹಿಂದೆ ಡಿ. ಕೆ. ಶಿವಕುಮಾರ್ ಭೇಟಿಯಾಗಿ, ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದರು.

“ಬಿಜೆಪಿಗೆ ವಲಸೆ ಬಂದಿರುವ ತಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಲವೇ ದಿನಗಳಲ್ಲಿ ತೀರ್ಮಾನ ಪ್ರಕಟಿಸುತ್ತೇನೆ” ಎಂದು ಕೆಲವು ದಿನಗಳ ಹಿಂದೆ ವಿ. ಎಸ್‌. ಪಾಟೀಲ್ ಹೇಳಿದ್ದರು.

ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ವಿ. ಎಸ್‌. ಪಾಟೀಲ್ ಮುಂದಿನ ಚುನಾವಣೆಗೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಶಿವರಾಂ ಹೆಬ್ಬಾರ್ ಸದ್ಯ ಕ್ಷೇತ್ರದ ಶಾಸಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರು. ಮುಂದಿನ ಚುನಾವಣೆಗೆ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ.

2013ರ ಚುನಾವಣೆಯಲ್ಲಿ ವಿ. ಎಸ್. ಪಾಟೀಲ್ ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು. 33,533 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಶಿವರಾಂ ಹೆಬ್ಬಾರ್ 58,025 ಮತಗಳನ್ನು ಪಡೆದು ಜಯಗಳಿಸಿದ್ದರು.

2018ರ ಚುನಾವಣೆಯಲ್ಲಿ ಭಾರೀ ಪೈಪೋಟಿ ನಡೆದಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಶಿವರಾಂ ಹೆಬ್ಬಾರ್ 66,290 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ವಿ. ಎಸ್. ಪಾಟೀಲ್ 64,807 ಮತಗಳನ್ನು ಪಡೆದು ಸೋತಿದ್ದರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಯಲ್ಲಾಪುರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು, ಸಚಿವರೂ ಆದರು.

ವಿ. ಎಸ್. ಪಾಟೀಲ್ ಉತ್ತರ ಕರ್ನಾಟಕದ ಸರಳ, ಸಂಭಾವಿತ ರಾಜಕಾರಣಿ. ಎಂದಿಗೂ ದರ್ಪ ತೋರಿದವರಲ್ಲ. ಅವರು ಶಾಸಕರಾಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳು ಅಪಾರ ಮೆಚ್ಚುಗೆಗೆ ಕಾರಣವಾಗಿತ್ತು. ಇಂದಿಗೂ ಕ್ಷೇತ್ರದಲ್ಲಿ ಅವರಿಗೆ ಅಪಾರ ಅಭಿಮಾನಿ ವರ್ಗವಿದೆ. 2019ರ ಡಿಸೆಂಬರ್‌ನಲ್ಲಿ ನಡೆದ ಯಲ್ಲಾಪುರ ಉಪ ಚುನಾವಣೆಯಲ್ಲಿ ಅವರು ಕ್ಷೇತ್ರವನ್ನೇ ತ್ಯಾಗ ಮಾಡಿದ್ದರು.

ಉಪ ಚುನಾವಣೆಯಲ್ಲಿ ಶಿವರಾಮ್ ಹೆಬ್ಬಾರ್ ಗೆದ್ದ ಬಳಿಕ ವಿ. ಎಸ್. ಪಾಟೀಲ್‌ಗೆ ಸಿಗಬೇಕಾದ ಗೌರವ ಸಿಗಲಿಲ್ಲ ಎಂಬುದು ಆರೋಪ. ಪಾಟೀಲ್‌ರ ಅಭಿಮಾನಿಗಳನ್ನು ಸಹ ಬದಿಗೆ ಸರಿಸಲಾಯಿತು. ಆದ್ದರಿಂದ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರು ಕಾಂಗ್ರೆಸ್ ಸೇರುತ್ತಿದ್ದಾರೆ